Blog

ಕನ್ನಡ ನಾಡ ಗೀತೆ

0

ರಚನೆ : ಕೆ ವಿ ಪುಟ್ಟಪ್ಪ

ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಜಯ ಸುಂದರ ನದಿ ವನಗಳ ನಾಡೇ,
ಜಯ ಹೇ ರಸಋಷಿಗಳ ಬೀಡೆ!

ಭೂದೇವಿಯ ಮಕುಟದ ನವಮಣಿಯೆ,
ಗಂಧದ ಚಂದದ ಹೊನ್ನಿನ ಗಣಿಯೆ;
ರಾಘವ ಮಧುಸೂಧನರವತರಿಸಿದ
ಭಾರತ ಜನನಿಯ ತನುಜಾತೆ!
ಜಯ ಹೇ ಕರ್ನಾಟಕ ಮಾತೆ!

ಜನನಿಯ ಜೋಗುಳ ವೇದದ ಘೋಷ,
ಜನನಿಗೆ ಜೀವವು ನಿನ್ನಾವೇಶ!
ಹಸುರಿನ ಗಿರಿಗಳ ಸಾಲೇ,
ನಿನ್ನಯ ಕೊರಳಿನ ಮಾಲೆ!
ಕಪಿಲ ಪತಂಜಲ ಗೌತಮ ಜಿನನುತ,
ಭಾರತ ಜನನಿಯ ತನುಜಾತೆ!
ಜಯ ಹೇ ಕರ್ನಾಟಕ ಮಾತೆ!

ಶಂಕರ ರಾಮಾನುಜ ವಿದ್ಯಾರಣ್ಯ,
ಬಸವೇಶ್ವರ ರಿಹ ದಿವ್ಯಾರಣ್ಯ.
ರನ್ನ ಷಡಕ್ಷರಿ ಪೊನ್ನ,
ಪಂಪ ಲಕುಮಿಪತಿ ಜನ್ನ.
ಕುಮಾರವ್ಯಾಸರ ಮಂಗಳಧಾಮ,
ಕವಿಕೋಗಿಲೆಗಳ ಪುಣ್ಯಾರಾಮ.
ನಾನಕ ರಮಾನಂದ ಕಬೀರರ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ.

ತೈಲಪ ಹೊಯ್ಸಳರಾಳಿದ ನಾಡೆ,
ಡಂಕಣ ಜಕಣರ ನೆಚ್ಚಿನ ಬೀಡೆ.
ಕೃಷ್ಣ ಶರಾವತಿ ತುಂಗಾ,
ಕಾವೇರಿಯ ವರ ರಂಗ.
ಚೈತನ್ಯ ಪರಮಹಂಸ ವಿವೇಕರ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ.

ಸರ್ವಜನಾಂಗದ ಶಾಂತಿಯ ತೋಟ,
ರಸಿಕರ ಕಂಗಳ ಸೆಳೆಯುವ ನೋಟ!
ಹಿಂದೂ ಕ್ರೈಸ್ತ ಮುಸಲ್ಮಾನ,
ಪಾರಸಿಕ ಜೈನರುದ್ಯಾನ
ಜನಕನ ಹೋಲುವ ದೊರೆಗಳ ಧಾಮ,
ಗಾಯಕ ವೈಣಿಕರಾರಾಮ.

ಕನ್ನಡ ನುಡಿ ಕುಣಿದಾಡುವ ಗೇಹ!
ಕನ್ನಡ ತಾಯಿಯ ಮಕ್ಕಳ ದೇಹ!
ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಜಯ ಸುಂದರ ನದಿ ವನಗಳ ನಾಡೆ,
ಜಯ ಹೇ ರಸಋಷಿಗಳ ಬೀಡೆ!

You might be interested in …